2c136fae-be38-4577-97e1-318669006cc9

ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡುವಂತೆ ಕೃಷಿ ಇಲಾಖೆಯಿಂದ ರೈತರಿಗೆ ಸಲಹೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 1- ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಉತ್ತಮ ಇಳುವರಿಗಾಗಿ ಬೆಳೆಗಳಿಗೆ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡುವಂತೆ ಕೃಷಿ ಇಲಾಖೆಯಿಂದ ರೈತರಿಗೆ ಸಲಹೆಗಳನ್ನು ನೀಡಲಾಗಿದೆ.

ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆAದು, ಕಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬ್ಡಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆAದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಅಧಾರ. ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.

ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಪ್‌ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊAದಿಗೆ ಬಳಸಬಹುದಾಗಿದೆ. ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ : ರಂಜಕ : ಪೊಟ್ಯಾಷ್ ರಸಗೊಬ್ಬರಗಳನ್ನು 4 : 2 : 1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಷ್‌ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಾಗಿರುತ್ತದೆ.

ಅಲ್ಲದೆ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10.26.26, 12:32:16, 22:22:11, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ರಸಗೊಬ್ಬರಗಳನ್ನೂ ಸಹ ಬಳಸಬಹುದಾಗಿದೆ.

ಈ ಬಗ್ಗೆ ಇಲಾಖೆಯ ವಿವಿಧ ಹಂತಗಳಲ್ಲಿ ಜರಗುವ ತರಬೇತಿಗಳು, ಕಾರ್ಯಾಗಾರಗಳು ಹಾಗೂ ಅಭಿಯಾನಗಳಲ್ಲಿ ಕಡ್ಡಾಯವಾಗಿ ರೈತರಿಗೆ ಹಾಗೂ ರಸಗೊಬ್ಬರ ಮಾರಾಟಗಾರರಿಗೆ ಅರಿವು ಮೂಡಿಸಲಾಗುತ್ತದೆ. ಮಾರಾಟಗಾರರು ರಸಗೊಬ್ಬರಗಳನ್ನು ಮಾರಾಟ ಮಾಡುವಾಗ ಪೊಟ್ಯಾಷ್‌ಯುಕ್ತ ಸಂಯುಕ್ತ ರಸಗೊಬ್ಬರಗಳ ಉಪಯುಕ್ತತೆ ಬಗ್ಗೆ ರೈತರಿಗೆ ತಿಳಿಸಬೇಕು ಎಂದು ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಕೃಷಿ ಆಯುಕ್ತರು ಹಾಗೂ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!