
ಬೆಳೆಹಾನಿ ಪರಿಹಾರ ರೈತರಿಗೆ ಪಾವತಿಸಲು ಸರ್ಕಾರದಿಂದ ಅನುಮತಿ
ಕರುನಾಡ ಬೆಳಗು ಸುದ್ದಿ
ವಿಜಯನಗರ,23- ರಾಜ್ಯ ಸರ್ಕಾರದಿಂದ 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2000ರವರೆಗೆ ರೈತರಿಗೆ ಪಾವತಿಸಲು ಸರ್ಕಾರವು ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಸರ್ಕಾರದ ನಿರ್ದೇಶನದಂತೆ ವಿಜಯನಗರ ಜಿಲ್ಲೆಯಲ್ಲಿ 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರಿಗೆ ಬೆಳೆ ಸಮೀಕ್ಷೆಯಲ್ಲಿ ಎಫ್.ಐ.ಡಿ ಹೊಂದಿರುವ ರೈತರ ಮಾಹಿತಿಯನ್ನಾಧರಿಸಿ ಪರಿಹಾರ ತಂತ್ರಾಂಶದ ಮೂಲಕ ಹಂತಹಂತವಾಗಿ ಪರಿಹಾರ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅದರಂತೆ ಮೂರು ಹಂತಗಳಲ್ಲಿ ಒಟ್ಟು 1,00,333 ರೈತರಿಗೆ 19,77,13,264 ರೂ.ಗಳ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲು ಅನುಮೋದನೆ ನೀಡಲಾಗಿದ್ದು, ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಿರುತ್ತಾರೆ ಹಾಗೂ ಬಾಕಿ ಉಳಿದ ರೈತರಿಗೆ ಹಂತಹಂತವಾಗಿ ಪರಿಹಾರ ನೀಡುವುದು ಪ್ರಗತಿ ಹಂತದಲ್ಲಿದ್ದು ತುರ್ತಾಗಿ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಹಶೀಲ್ದಾರ ಕಾರ್ಯಾಲಯಕ್ಕೆ ಭೇಟಿ ನೀಡಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ