*ಜಾತಿಗಣತಿ ವರದಿಯನ್ನು ನಾವು ಸ್ವೀಕರಿಸುತ್ತೇವೆ:                           ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*

*ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ: ಸಿಎಂ ಸಿದ್ದರಾಮಯ್ಯ*

ಕರುನಾಡ ಬೆಳಗು ಸುದ್ದಿ

ಬೆಂಗಳೂರು ಅ 29: ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು.

ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು.

ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದರು.

ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ ಎಂದು ನುಡಿದರು.

*ಜಾತಿಗಣತಿ ವರದಿ ಸ್ವೀಕರಿಸುತ್ತೇವೆ*

ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದರು.

ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಹಾಗೂ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು,

Leave a Reply

Your email address will not be published. Required fields are marked *

error: Content is protected !!